ಕರ್ನಾಟಕದಲ್ಲಿ ಆಗಸ್ಟ್ 27ರಂದು ನಡೆಯಲಿರುವ ಕೆಪಿಎಸ್‌ಸಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಣ್ಣ ಗುಂಪೊಂದು ಆಗಸ್ಟ್ 24ರಂದು ಪ್ರತಿಭಟನೆ ನಡೆಸಿದ್ದು, ಇದರ ಫೋಟೋ ಬಳಸಿಕೊಂಡು “ಕರ್ನಾಟಕದಲ್ಲಿ ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ, ರಾಹುಲ್ ಗಾಂಧಿ ಮೌನವಾಗಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಆಡಳಿತ ಸೇವೆಗಳ ಪರೀಕ್ಷೆಗಳಲ್ಲಿ ಆಗುತ್ತಿರುವ ಹಗರಣಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ಶೂಗಳನ್ನು ಪಾಲಿಶ್ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರನೇ ಬಾರಿ ಫೇಲ್ ಆಗಿರುವ ರಾಹುಲ್ ಗಾಂಧಿ, ಇತ್ತೀಚೆಗಷ್ಟೇ ಸ್ವಚ್ಛ ಪರೀಕ್ಷೆಗಳ ಹೋರಾಟಗಾರ ಎಂದು ಬಿಂಬಿಸಿಕೊಂಡಿದ್ದರು. ಆದರೆ, ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿಯೇ ಪೇಪರ್ ಸೋರಿಕೆಯಾಗುತ್ತಿರುವ ಬಗ್ಗೆ ಅಸಹಜವಾಗಿ ಮೌನವಾಗಿದ್ದಾರೆ” ಮಾಳವಿಯಾ ಟ್ವೀಟ್ ಮಾಡಿದ್ದಾರೆ.
ಫ್ಯಾಕ್ಟ್‌ಚೆಕ್:
ಅಮಿತ್ ಮಾಳವಿಯಾ ಹಂಚಿಕೊಂಡಿರುವ ಫೋಟೋ, ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಆಗಸ್ಟ್ 27ರಂದು ನಡೆಸಲಿರುವ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಆಗಸ್ಟ್ 24ರಂದು ಆಕಾಂಕ್ಷಿಗಳು ಶೂ ಪಾಲಿಶ್ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಕ್ಕೆ ಸಂಬಂಧಿಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆದ ಪ್ರತಿಭಟನೆ ಅಲ್ಲ.
ಈ ಪ್ರತಿಭಟನೆಯ ಬಗ್ಗೆ ಪ್ರಜಾವಾಣಿ ವರದಿ ಮಾಡಿದ್ದನ್ನು ಇಲ್ಲಿ ಓದಬಹುದು. ಕನ್ನಡದ ಬಹುತೇಕ ಮಾಧ್ಯಮಗಳು ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ವರದಿ ಮಾಡಿವೆಯೇ ಹೊರತು, ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ಯಾವುದೇ ವರದಿಗಳಿಲ್ಲ.
ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳ ಸಣ್ಣ ಗುಂಪೊಂದು ಪ್ರತಿಭಟನೆ ಮಾಡಿದ ಫೋಟೋ ಬಳಸಿಕೊಂಡು ಕರ್ನಾಟಕದಲ್ಲಿ ಕೆಪಿಎಸ್‌ಸಿ ಪರೀಕ್ಷೆ ಸೋರಿಕೆಯಾಗಿದೆ ಎಂದು ತಿರುಚಿದ ಅಮಿತ್ ಮಾಳವಿಯಾ ಸುಳ್ಳು ಸುದ್ದಿ ಹರಡುತ್ತಿದ್ದಾರೆ.
ಈಗಾಗಲೇ ಹಲವು ಬಾರಿ ಪರೀಕ್ಷೆ ಮುಂದೂಡಿದ್ದರಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದು, ಈ ನಡುವೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿ ಹರಡುತ್ತಿರುವ ಅಮಿತ್ ಮಾಳವಿಯಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನರು ಆಗ್ರಹಿಸುತ್ತಿದ್ದಾರೆ.