ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಅವರು ಮುಸ್ಲಿಂ ನಾಯಕನ ಭಾಷಣವನ್ನು ಕೇಳುತ್ತಿರುವುದನ್ನು ತೋರಿಸಲಾಗಿದೆ. ಅನೇಕ ಬಳಕೆದಾರರು ಈ ಕ್ಲಿಪ್ ಅನ್ನು ನಿಜವೆಂದು ಭಾವಿಸಿ ಹಂಚಿಕೊಳ್ಳುತ್ತಿದ್ದಾರೆ. ಹಲವರು ಯೋಗಿ ಆದಿತ್ಯನಾಥ್ ಅವರ ಕುರಿತು ವಿವಿಧ ರೀತಿಯ ವಿಮರ್ಶೆಗಳನ್ನು ಕೂಡ ಮಾಡುತ್ತಿದ್ದಾರೆ.

ವೈರಲ್ ಪೋಸ್ಟ್ ಕೂಡ ನೋಡಿದ ಹಲವು ಮಂದಿ ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಂಡಿದ್ದಾರೆ. ಆ ಮೂಲಕ ಇದರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತ ಪಡಿಸುತ್ತಿದ್ದಾರೆ. ಇನ್ನೂ ಕೆಲವರು ರಾಜಕೀಯವಾಗಿ ಟೀಕೆಯನ್ನು ಕೂಡ ಮಾಡುತ್ತಿದ್ದಾರೆ. ಇದರಿಂದ ವೈರಲ್ ಪೋಸ್ಟ್ ಹೆಚ್ಚು ಹಂಚಿಕೊಳ್ಳಲಾಗುತ್ತಿದೆ. ಹೀಗೆ ವ್ಯಾಪಕವಾಗಿ ಶೇರ್ ಆಗುತ್ತಿರುವ ವೈರಲ್ ಪೋಸ್ಟ್ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋ ಮತ್ತು ಫೋಟೋಗೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮಗುರು ಮಾತನಾಡುವ ಒಂದು ಭಾಗದ ಕೀ ಫ್ರೇಮ್ ಅನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ವೈರಲ್ ಪೋಸ್ಟ್ಗೆ ಸಂಬಂಧಿಸಿದಂತೆ ನಾವು AZMI MUSHAIRA MEDIA ಎಂಬ ಯೂಟ್ಯೂಬ್ ಚಾನೆಲ್ನಲ್ಲಿ ಮೂಲ ವೀಡಿಯೊವನ್ನು ಕಂಡುಕೊಂಡಿದ್ದೇವೆ. 30 ಮೇ 2024ರಂದು ಅಪ್ಲೋಡ್ ಮಾಡಲಾದ ಈ ವೀಡಿಯೊದ ಆರಂಭದಲ್ಲಿ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪೂರ್ವಾಂಚಲ್ ಪ್ರದೇಶದ ಅಧ್ಯಕ್ಷ ಇಸ್ರಾರ್ ಅಹ್ಮದ್ ಅವರು ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳುವುದನ್ನು ಕೇಳಬಹುದು. ಹಾಗಾಗಿ ಇದು ಹಳೆಯ ವಿಡಿಯೋ ಎಂಬುದು ಸ್ಪಷ್ಟವಾಗಿದೆ
ಇನ್ನು ವೈರಲ್ ಪೋಸ್ಟ್ನಲ್ಲಿ ಯೋಗಿ ಆದಿತ್ಯನಾಥ್ ಅವರು ಕೈಮುಗಿದು ಕುಳಿತಿರುವ ಭಾಗವನ್ನು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟ ನಡೆಸಿದೆವು. ಈ ವೇಳೆ ನಮಗೆ 21 ಮಾರ್ಚ್ 2017ರಂದು ಸೋಶಿಯಲ್ ನ್ಯೂಸ್ XYZ ಎಂಬ ಸುದ್ದಿತಾಣವೊಂದು ಪ್ರಕಟಿಸಿದ ವರದಿಯೊಂದು ಕಂಡು ಬಂದಿದೆ. ಇದರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿದ್ದಾರೆ ಎಂದು ಉಲ್ಲೇಖಿಸಿರುವದು ಕಂಡು ಬಂದಿದೆ. ಈ ಮೂಲಕ ವೈರಲ್ ಪೋಸ್ಟ್ನಲ್ಲಿ ಯೋಗಿ ಆದಿತ್ಯನಾಥ್ ಅವರ ಭಾಗದ ಚಿತ್ರ ಕೂಡ ಹಳೆಯದು ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್ ಅವರು ಮುಸ್ಲಿಂ ಧರ್ಮ ಗುರುವಿನ ಕಾರ್ಯಕ್ರಮವನ್ನು ಟಿವಿಯಲ್ಲಿ ವೀಕ್ಷಿಸಿದ್ದಾರೆ ಎಂಬುದು ಸುಳ್ಳು. ಹಾಗಾಗಿ ತಪ್ಪು ಮಾಹಿತಿಯಿಂದ ಕೂಡಿರುವ ಪೋಸ್ಟ್ ಅನ್ನು ಯಾವುದೇ ಕಾರಣಕ್ಕೂ ಶೇರ್ ಮಾಡಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

