ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಂತರದಲ್ಲಿ ಕದನ ವಿರಾಮ ಘೋಷಿಸಲಾಗಿದ್ದು, ಇದೀಗ ಕದನ ವಿರಾಮವು ವಿವಿಧ ರೀತಿಯ ಚರ್ಚೆಗಳಿಗೆ ಕೂಡ ಕಾರಣವಾಗಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರದ್ದು ಎನ್ನಲಾದ ವಿಡಿಯೋ ಒಂದು ವೈರಲ್ ಆಗಿದ್ದು, ಇದರಲ್ಲಿ ಅವರು ಪಾಕಿಸ್ತಾನವನ್ನು ನಿಭಾಯಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಹಾಯವನ್ನು ನಿರಾಕರಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ ಎಂಬ ಬರಹದೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.

ವೈರಲ್ ವಿಡಿಯೋದಲ್ಲಿ ಕೂಡ ಡೊನಾಲ್ಡ್ ಟ್ರಂಪ್ ಅವರು “ನಾನು ಪ್ರಧಾನಿ ಮೋದಿಗೆ ಪಾಕಿಸ್ತಾನದ ಜೊತೆಗಿನ ಸಂಘರ್ಷಕ್ಕೆ ಸಹಾಯ ಮಾಡುತ್ತೇವೆ ಎಂದು ಹೇಳಿದ್ದೆ, ಆದರೆ ಪ್ರಧಾನಿ ಮೋದಿ ನಾವೇ ನೋಡಿಕೊಳ್ಳುತ್ತೇವೆ, ನಮಗೆ ಏನು ಅವಶ್ಯಕತೆ ಇದೆಯೋ ಅದನ್ನು ನಾವೇ ಮಾಡುತ್ತೇವೆ ಎಂದು ಹೇಳಿದ್ದಾರೆ” ಎಂದು ಹೇಳುವುದು ಕಂಡು ಬಂದಿದೆ. ಹೀಗಾಗಿ ವೈರಲ್ ವಿಡಿಯೋವನ್ನು ನಿಜವೆಂದು ಭಾವಿಸಿ, ಹಲವರು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೇಗೆ ವ್ಯಾಪಕವಾಗಿ ಶೇರ್ ಮಾಡಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ
Donald Trump about PM Modi's Anger 🚨
Says he offered PM Modi to help deal with Pakistan after terror attack.
PM Modi said- I Will Do It, I'll do anything necessary 🔥 pic.twitter.com/0COFNpWdHQ
— Ankur Singh (@AnkurSingh) October 9, 2024
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವಿವಿಧ ಕೀ ವರ್ಡ್ಗಳನ್ನು ಬಳಸಿಕೊಂಡು ಗೂಗಲ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 9 ಅಕ್ಟೋಬರ್ 2024 ರಂದು ಹಿಂದುಸ್ತಾನ್ ಟೈಮ್ಸ್ ನ ವರದಿಯೊಂದು ಕಂಡುಬಂದಿದೆ. ಅದರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಮತ್ತು ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ, ಅವರನ್ನು ಉತ್ತಮ ಸ್ನೇಹಿತ ಮತ್ತು ಅತ್ಯಂತ ಒಳ್ಳೆಯ ಮನುಷ್ಯ ಎಂದು ಹೊಗಳಿದ್ದಾರೆ ಮಾಹಿತಿ ಈ ವರದಿಯಲ್ಲಿ ಕಂಡು ಬಂದಿದೆ.

ಇನ್ನು ಆಂಡ್ರ್ಯೂ ಶುಲ್ಜ್ ಮತ್ತು ಆಕಾಶ್ ಸಿಂಗ್ ಆಯೋಜಿಸಿದ್ದ ಫ್ಲ್ಯಾಗ್ರಾಂಟ್ ಪಾಡ್ಕ್ಯಾಸ್ಟ್ನ ಒಂದು ಸಂಚಿಕೆಯಲ್ಲಿ ಟ್ರಂಪ್ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ನಾವು ಫ್ಲ್ಯಾಗ್ರಾಂಟ್ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ಪರಿಶೀಲನೆ ನಡೆಸಿದೆವು ಈ ವೇಳೆ ನಮಗೆ ವಿಡಿಯೋ ಆರಂಭವಾದ ಸುಮಾರು 35 ನಿಮಿಷಗಳ ನಂತರ ಟ್ರಂಪ್ ವಿಶ್ವದ ನಾಯಕರಗಳ ಬಗ್ಗೆ ಮಾತನಾಡುತ್ತಿರುವುದು ಕಂಡುಬಂದಿದೆ. ಇದರಲ್ಲಿ ಅವರು ಸಂಪೂರ್ಣವಾಗಿ ಮೋದಿಯವರ ಆಡಳಿತದ ಬಗ್ಗೆ ಹೊಗಳಿರುವುದು ಮತ್ತು ಅವರು ತಮ್ಮ ಅತ್ಯುತ್ತಮ ಸ್ನೇಹಿತ ಎಂದು ಹೇಳಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಈ ವಿಡಿಯೋ ಮೂಲಕ ವೈರಲ್ ಆಗುತ್ತಿರುವ ವಿಡಿಯೋ ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿರುವುದು ಸ್ಪಷ್ಟವಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಹಾಯವನ್ನು ನಿರಾಕರಿಸಿದ್ದರು ಎಂದು ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳಾಗಿದೆ. ವೈರಲ್ ವಿಡಿಯೋ ಟ್ರಂಪ್ ಅವರು ಅಧ್ಯಕ್ಷರಾಗುವುದಕ್ಕೂ ಮುನ್ನ ಚಿತ್ರೀಕರಿಸಲಾಗಿದ್ದು, ಈ ವಿಡಿಯೋದಲ್ಲಿ ಟ್ರಂಪ್ ಅವರು ಪ್ರಧಾನಿ ಮೋದಿ ಅವರನ್ನು ಹೊಗಳಿರುವುದು ಕಂಡುಬಂದಿದೆ. ಹಾಗಾಗಿ ವೈರಲ್ ವಿಡಿಯೋ ಎಡಿಟ್ ಮಾಡಿ ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿರುವುದು ಸ್ಪಷ್ಟವಾಗಿದೆ. ಹೀಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಕಝಾಕಿಸ್ತಾನ್ ಪರಮಾಣು ಕೇಂದ್ರದ ಹಳೆಯ ಫೋಟೋಗಳನ್ನು ಪಾಕಿಸ್ತಾನದ ಕಿರಾನಾ ಬೆಟ್ಟಗಳು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

