ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹೆಚ್ಚು ವೈರಲ್ ಆಗುತ್ತಿದೆ. ಇದರಲ್ಲಿ ಸಲ್ಮಾನ್ ಖಾನ್ ಅವರ ಅಂಗರಕ್ಷಕ ಶೇರಾ ಜೈಲಿನ ಹೊರಗೆ ಕಾಣಸಿಗುತ್ತಾರೆ. ವೀಡಿಯೊದಲ್ಲಿ ಇನ್ನೂ ಅನೇಕ ಜನರು ಕಾಣಿಸಿಕೊಂಡಿದ್ದಾರೆ. ಇದೀಗ ಕೆಲವರು ಈ ವಿಡಿಯೋವನ್ನು ಶೇರ್ ಮಾಡಿದ್ದು, ಲಾರೆನ್ಸ್ ಬಿಷ್ಣೋಯ್ ಅವರನ್ನು ಭೇಟಿ ಮಾಡಲು ಸಲ್ಮಾನ್ ಖಾನ್ ಜೈಲಿಗೆ ಹೋಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಹೀಗಾಗಿ ಈ ವಿಡಿಯೋ ಈಗ ಹಲವು ಚರ್ಚೆಗಳಿಗೆ ಕೂಡ ಕಾರಣವಾಗಿದೆ.

ನವೆಂಬರ್ 10 ರಂದು ವೈರಲ್ ವೀಡಿಯೊವನ್ನು ಹಂಚಿಕೊಳ್ಳುವಾಗ, ಫೇಸ್ಬುಕ್ ಬಳಕೆದಾರರು, “ಸಲ್ಮಾನ್ ಖಾನ್ ಲಾರೆನ್ಸ್ ವಿಶ್ವನೋಯಿ ಅವರನ್ನು ಭೇಟಿ ಮಾಡಲು ಜೈಲಿಗೆ ತಲುಪಿದ್ದಾರೆ ಮತ್ತು ಅವರ ಅಂಗರಕ್ಷಕ ಶೇರಾ ಹಾಗೂ ಇನ್ನೂ ಹಲವು ಬೆಂಬಲಿಗರು ರಹಸ್ಯವಾಗಿ ಜೈಲಿಗೆ ಹೋಗಿ ಬಂದಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಸಲ್ಮಾನ್ ಖಾನ್ ಮತ್ತು ಲಾರೆನ್ಸ್ ಬಿಷ್ಣೋಯ್ ನಡುವೆ ಸಂಧಾನ ಕಾರ್ಯಗಳು ನಡೆಯುತ್ತಿವೆ ಎಂದು ಹಂಚಿಕೊಳ್ಳಲಾಗುತ್ತಿದೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 7 ಏಪ್ರಿಲ್ 2018ರಂದು ಲೈವ್ ಹಿಂದೂಸ್ತಾನ್ ಯೂಟ್ಯೂಬ್ ಚಾನಲ್ನಲ್ಲಿ ಹಂಚಿಕೊಳ್ಳಲಾದ ವಿಡಿಯೋ ವರದಿಯೊಂದು ಕಂಡು ಬಂದಿದೆ. ಈ ವರದಿಯ ಪ್ರಕಾರ 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ಗೆ ಜೋಧ್ಪುರದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದ ವಿಡಿಯೋ ಎಂಬುದು ತಿಳಿದು ಬಂದಿದೆ.
ಇನ್ನು Sansad TV ಯ ಅಧಿಕೃತ YouTube ಚಾನಲ್ನಲ್ಲಿ ವೈರಲ್ ವೀಡಿಯೊಗೆ ಸಂಬಂಧಿಸಿದ ವರದಿಯನ್ನು ನಾವು ಕಂಡುಕೊಂಡಿದ್ದೇವೆ. ವೀಡಿಯೊವನ್ನು 7 ಏಪ್ರಿಲ್ 2018 ರಂದು ಅಪ್ಲೋಡ್ ಮಾಡಲಾಗಿದೆ. ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಸಲ್ಮಾನ್ ಖಾನ್ ಎರಡು ದಿನಗಳನ್ನು ಜೈಲಿನಲ್ಲಿ ಕಳೆದ ನಂತರ ಜೋಧ್ಪುರ ಜೈಲಿನಿಂದ ಹೊರಬಂದಿದ್ದಾರೆ. ಏಪ್ರಿಲ್ 5, 2018 ರಂದು ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ದೋಷಿ ಎಂದು ಘೋಷಿಸಲಾಯಿತು ಮತ್ತು ಏಪ್ರಿಲ್ 7 ರಂದು ಜಾಮೀನು ನೀಡಲಾಯಿತು ಎಂಬುದನ್ನು ಕೂಡ ಉಲ್ಲೇಖಿಸಲಾಗಿದೆ. ಇದೇ ಅಂಶಗಳು ಹಲವು ವರದಿಗಳಲ್ಲಿ ಕೂಡ ಉಲ್ಲೇಖವಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜಾಮೀನು ಪಡೆದು ಸಲ್ಮಾನ್ ಖಾನ್ ಜೋಧ್ಪುರ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದ 2018ರ ವಿಡಿಯೋವನ್ನು ಇತ್ತೀಚೆಗೆ ಸಲ್ಮಾನ್ ಖಾನ್ ಲಾರೆನ್ಸ್ ಬಿಷ್ಣೋಯ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. ಅಲ್ಲಿಗೆ ವೈರಲ್ ವಿಡಿಯೋ ಸುಳ್ಳು ನಿರೂಪಣೆಯಿಂದ ಕೂಡಿದೆ ಎಂಬುದು ಸಾಬೀತಾಗಿದೆ. ಹಾಗಾಗಿ ಈ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಮುಸ್ಲಿಂ ಜಿಮ್ ಟ್ರೈನರ್ ಹಿಂದೂ ಮಹಿಳೆಯರನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

