ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ವರದಿಗಳು ಕಂಡುಬರುತ್ತಿವೆ. ಕೆಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್, ಇನ್ನೂ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಇದರ ನಡುವೆ ಬೆಂಗಳೂರಿನಲ್ಲೂ ಭೀಕರವಾದ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಇದೀಗ ಬಸ್ ಒಳಗೆ ನೀರು ನುಗ್ಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ವೈರಲ್ ವಿಡಿಯೋದಲ್ಲಿ ಬಿಎಂಟಿಸಿ ಬಸ್ ಒಂದರೊಳಗೆ ನೀರು ನುಗ್ಗುತ್ತಿರುವುದು ಕಂಡುಬಂದಿದ್ದು, ಇದನ್ನು ನೋಡಿದ ಸಾರ್ವಜನಿಕರು ರಾಜ್ಯ ಸರ್ಕಾರಕ್ಕೆ ಛೀಮಾರಿಯನ್ನು ಹಾಕುತ್ತಿದ್ದಾರೆ. ಇನ್ನೂ ಹಲವರು, ಇತ್ತೀಚಿನ ಮಳೆಗೆ ಬಹುತೇಕ ಬಸ್ಗಳಲ್ಲಿ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಬರೆದುಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 23 ಅಕ್ಟೋಬರ್ 2024 ರಂದು ನಮ್ಮ ಹೊಸೂರು ಅಫಿಶಿಯಲ್ ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಇದೇ ವೈರಲ್ ವಿಡಿಯೋವನ್ನು ಹಂಚಿಕೊಂಡಿರುವುದು ಕಂಡುಬಂದಿದೆ. ಈ ಮೂಲಕ ವೈರಲ್ ವಿಡಿಯೋ 2024 ರದ್ದು ಮತ್ತು ಹಳೆಯದ್ದು ಎಂಬುದು ಖಚಿತವಾಗಿದೆ.

ಇನ್ನು ಈ ಕುರಿತು ಕೆಲವೊಂದು ಕೀ ವರ್ಡ್ಗಳನ್ನು ಬಳಸಿ ಹುಡುಕಾಟವನ್ನು ನಡೆಸಿದಾಗ, ಬಿಎಂಟಿಸಿ ಬಸ್ ಒಳಗೆ ನೀರು ನುಗ್ಗಿದೆ ಎಂದು 23 ಅಕ್ಟೋಬರ್ 2024 ರಂದು ಎಕ್ಸ್ ಬಳಕೆದಾರರು ಇದೇ ವೈರಲ್ ವಿಡಿಯೋವನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿರುವುದು ಕಂಡುಬಂದಿದೆ. ಈ ಪೋಸ್ಟ್ ಕೂಡ ವೈರಲ್ ವಿಡಿಯೋ 2024 ರದ್ದು ಎಂದು ಖಚಿತಪಡಿಸಿದ್ದು, ಇತ್ತೀಚಿನ ಮಳೆಯಲ್ಲಿನ ಘಟನೆಗೆ ಸಂಬಂಧಿಸಿದಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಇತ್ತೀಚಿನ ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಒಂದರೊಳಗೆ ನೀರು ನುಗ್ಗಿದೆ ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ 2024 ರದ್ದಾಗಿದೆ. ಈ ವಿಡಿಯೋ ಇತ್ತೀಚಿನ ಮಳೆಯ ಪ್ರಕರಣಗಳಿಗೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಹೀಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ನ್ಯೂಜಿಲೆಂಡ್ ಸರ್ಕಾರ ಎಲ್ಲಾ ಮಸೀದಿಗಳನ್ನು ಮುಚ್ಚಲು ಆದೇಶಿಸಿದೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

