ಏಪ್ರಿಲ್ 24, 2025: ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ದುರಂತವಾಗಿ ಸಾವನ್ನಪ್ಪಿದ ನಂತರ, ಲೆಫ್ಟಿನೆಂಟ್ ನರ್ವಾಲ್ ಮತ್ತು ಅವರ ಪತ್ನಿಯ ಕೊನೆಯ ಕ್ಷಣಗಳನ್ನು ತೋರಿಸುವುದಾಗಿ ಹೇಳಿಕೊಳ್ಳುವ ವೀಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ.
https://www.youtube.com/watch?v=99JsKzGfDts
ಹಲವು ಮಾಧ್ಯಮಗಳು ಕೂಡ ಇದೇ ವಿಡಿಯೋವನ್ನು ವಿನಯ್ ನರ್ವಾಲ್ ಅವರು ತಮ್ಮ ಪತ್ನಿಯೊಂದಿಗೆ ಇರುವ ಕೊನೆಯ ದೃಶ್ಯಾವಳಿಗಳು ಎಂದು ವರದಿ ಮಾಡಿವೆ. ಹೀಗಾಗಿ ಸಾಮಾಜಿಕ ಜಾಲತಾಣದ ಬಳಕೆದಾರರು ಕೂಡ ವೈರಲ್ ವಿಡಿಯೋವನ್ನು ನಿಜವಾದ ವಿಡಿಯೋ ಎಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಶೇರ್ ಮಾಡಲಾಗುತ್ತಿರುವ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
https://www.youtube.com/shorts/8nRsSyUOX10
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಆಶಿಶ್ ಸೆಹ್ರಾವತ್ ಮತ್ತು ಯಾಶಿಕಾ ಶರ್ಮಾ ಎಂಬುವವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಸ್ಪಷ್ಟನೆಯನ್ನು ನೀಡಿರುವುದು ಕಂಡು ಬಂದಿದೆ.

ಈ ವಿಡಿಯೋದಲ್ಲಿಅವರು ವೈರಲ್ ಆಗಿರುವ ದೃಶ್ಯಗಳು ತಮ್ಮದಾಗಿದ್ದು, ಲೆಫ್ಟಿನೆಂಟ್ ವಿನಯ್ ನರ್ವಾಲ್ ಮತ್ತು ಅವರ ಪತ್ನಿಯದ್ದಲ್ಲ ಎಂದು ಸ್ಪಷ್ಟಪಡಿಸಿರುವುದು ಕಂಡು ಬಂದಿದೆ. ಏಪ್ರಿಲ್ 11 ರಿಂದ 15 ರ ನಡುವೆ ಜಮ್ಮು ಮತ್ತು ಕಾಶ್ಮೀರಕ್ಕೆ ರಜೆಯ ಸಮಯದಲ್ಲಿ ಈ ವಿಡಿಯೋವನ್ನು ರೆಕಾರ್ಡ್ ಮಾಡಲಾಗಿದೆ ಪಹಲ್ಗಾಮ್ ದಾಳಿಯ ನಂತರ, ನಾವು ಸುರಕ್ಷಿತವಾಗಿದ್ದೇವೆಯೇ ಎಂದು ಪರಿಶೀಲಿಸಲು ಅನೇಕ ಜನರು ನಮಗೆ ಕರೆ ಮಾಡಲು ಪ್ರಾರಂಭಿಸಿದರು. ಆಗ ನಮ್ಮ ವೀಡಿಯೊವನ್ನು ಆನ್ಲೈನ್ನಲ್ಲಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ನಮಗೆ ಅರಿವಾಯಿತು ಎಂದು ಮಾಧ್ಯಮ ಸಂಸ್ಥೆಯೊಂದಕ್ಕೆ ದಂಪತಿಗಳು ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದ್ದಾರೆ. ಈ ದಂಪತಿಗಳ ಸ್ಪಷ್ಟನೆಯ ಮೂಲಕ ವೈರಲ್ ವಿಡಿಯೋ ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿರುವುದು ಸಾಭೀತಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳು ವರದಿ ಮಾಡಿರುವಂತೆ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರು ತಮ್ಮ ಪತ್ನಿಯೊಂದಿಗೆ ಇರುವ ಕೊನೆಯ ವಿಡಿಯೋ ದೃಶ್ಯಾವಳಿಗಳು ಎಂಬುದು ಸುಳ್ಳಾಗಿದೆ. ವೈರಲ್ ವಿಡಿಯೋಗೂ ಮೃತ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಈ ವಿಡಿಯೋ ಶಿಶ್ ಸೆಹ್ರಾವತ್ ಮತ್ತು ಯಾಶಿಕಾ ಶರ್ಮಾ ಎಂಬುವವರಿಗೆ ಸಂಬಂಧಿಸಿದ್ದಾಗಿದೆ. ಇದನ್ನು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ. ಹೀಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಸಂಸದರು ಅಥವಾ ಶಾಸಕರು ವಕೀಲಿ ವೃತ್ತಿ ಮಾಡುವುದಕ್ಕೆ ನಿಷೇಧವಿದೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

