ಜೂನ್ 12 ರಂದು ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಯಿತು. ವಿಮಾನವು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಮೇಲೆ ಬಿದ್ದಿತು. ಈ ಅಪಘಾತದಲ್ಲಿ ವಿಮಾನದಲ್ಲಿದ್ದ 200 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು. ಅಪಘಾತಕ್ಕೆ ಸಂಬಂಧಿಸಿದ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ, ಕಟ್ಟಡವೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿರುವುದನ್ನು ಕಾಣಬಹುದು. ಇದು ಅಹಮದಾಬಾದ್ ವಿಮಾನ ಅಪಘಾತದ ದೃಶ್ಯ ಎಂದು ಹಲವರು ಹಂಚಿಕೊಳ್ಳುತ್ತಿದ್ದಾರೆ.

ಈ ದೃಶ್ಯವನ್ನು ಹಂಚಿಕೊಂಡ ಹಲವರು ವಿಮಾನ ಅಪಘಾತಕ್ಕೆ ಅದರ ಸುತ್ತಮುತ್ತಲಿನ ಹಲವು ಬೃಹತ್ ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ ಎಂದು ಬರೆದುಕೊಳ್ಳುತ್ತಿದ್ದಾರೆ. ವೈರಲ್ ವಿಡಿಯೋವನ್ನು ನಿಜವೆಂದು ಭಾವಿಸಿದ ಸಾಕಷ್ಟು ಮಂದಿ ಇದನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟ ನಡೆಸಿದೆವು. ಈ ವೇಳೆ ನಮಗೆ ವೈರಲ್ ವಿಡಿಯೋ ಕುರಿತು ಎಬಿಸಿ ನ್ಯೂಸ್ 24 x 7 ಫೇಸ್ಬುಕ್ ಪುಟದಲ್ಲಿ ಅಪ್ಲೋಡ್ ಮಾಡಲಾದ ಪೋಸ್ಟ್ವೊಂದು ಕಂಡು ಬಂದಿದೆ. ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ ಈ ವಿಡಿಯೋ ಗುಜರಾತ್ನ ಭರೂಚ್ನಲ್ಲಿರುವ ಕಂಪನಿಯೊಂದರಲ್ಲಿಗುಜರಾತ್ನ ಭರೂಚ್ನಲ್ಲಿರುವ ಕಂಪನಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಸಂಬಂಧಿಸಿದ್ದಾಗಿದೆ.

ಈ ವೀಡಿಯೊವನ್ನು ಅವರ್ ಗುಜರಾತ್ನ್ಯೂಸ್ ಎಂಬ ಇನ್ಸ್ಟಾಗ್ರಾಮ್ ಹ್ಯಾಂಡಲ್ ಏಪ್ರಿಲ್ 14 ರಂದು ಪೋಸ್ಟ್ ಮಾಡಿದೆ. “ಪನೋಲಿಯ ಅಂಕಲೇಶ್ವರದಲ್ಲಿರುವ ಜಲ ಅಕ್ವಾ ಮತ್ತು ಬಿಆರ್ ಆಗ್ರೋ ಎಂಬ ಕಂಪನಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಭೀಕರ ರೂಪವನ್ನು ಪಡೆದುಕೊಂಡಿತು ಮತ್ತು ಇಡೀ ಸ್ಥಾವರಕ್ಕೆ ಬೆಂಕಿ ಹೊತ್ತಿಕೊಂಡಿತು” ಎಂದು ಈ ಪೋಸ್ಟ್ನಲ್ಲಿ ಉಲ್ಲೇಖಿಸಿರುವುದು ಕಂಡು ಬಂದಿದೆ.

ಏಪ್ರಿಲ್ 14 ರಂದು ANI ವೆಬ್ಸೈಟ್ನಲ್ಲಿ ಪ್ರಕಟವಾದ ವರದಿಯ ಪ್ರಕಾರ , ಭರೂಚ್ನ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಚಿತ್ರವನ್ನು ಸಹ ಅದರಲ್ಲಿ ಅಪ್ಲೋಡ್ ಮಾಡಲಾಗಿದೆ.

ಈ ಘಟನೆಯ ಸುದ್ದಿಯನ್ನು ಏಪ್ರಿಲ್ 14 ರಂದು ಎಬಿಪಿ ನ್ಯೂಸ್ನ ಯೂಟ್ಯೂಬ್ ಚಾನೆಲ್ನಲ್ಲಿಯೂ ನೋಡಬಹುದು.
ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಬೆಂಕಿಯಿಂದ ಆವೃತವಾದ ಕಟ್ಟಡದ ದೃಶ್ಯಕ್ಕೂ ಅಹಮದಾಬಾದ್ನಲ್ಲಿ ನಡೆದ ವಿಮಾನ ಅಪಘಾತಕ್ಕೂ ಯಾವುದೇ ರೀತಿಯಾದ ಸಂಬಂಧಿವಿಲ್ಲ ಎಂಬುದು ನಮಗೆ ಖಚಿತವಾಗಿದೆ. ವೈರಲ್ ವಿಡಿಯೋ ಭರೂಚ್ನ ಕಂಪನಿಯೊಂದರ ಕಟ್ಟಡ ಅಗ್ನಿ ಅವಘಡಕ್ಕೆ ಸಿಲುಕಿಕೊಂಡಿದ್ದಕ್ಕೆ ಸಂಬಂಧಿಸಿದ್ದಾಗಿದೆ. ಹಾಗಾಗಿ ಈ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಕ್ಯಾಬಿನ್ನಲ್ಲಿ ಹೊಗೆ ತುಂಬಿರುವ ಈ ವೀಡಿಯೊ ಅಹಮದಾಬಾದ್ ವಿಮಾನ ಅಪಘಾತಕ್ಕೆ ಸಂಬಂಧಿಸಿದ್ದಲ್ಲ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

